ಕಾಶ್ಮೀರದಲ್ಲಿ ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಾಲ್ವರು ಉಗ್ರರನ್ನು ಹೊಸಕಿಹಾಕಿದ ಸೇನೆ..!

ಶ್ರೀನಗರ: ಕಣಿವೆ ರಾಜ್ಯ ಕಾಶ್ಮೀರದಲ್ಲಿ ಉಗ್ರರ ನಿಗ್ರಹ ಕಾರ್ಯಾಚರಣೆಯನ್ನು ಭದ್ರತಾಪಡೆಗಳು ಮತ್ತಷ್ಟು ತೀವ್ರಗೊಳಿಸಿವೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಭರ್ಜರಿ ಸೇನಾ ಕಾರ್ಯಾಚರಣೆ ನಡೆಸಿ ಮನೆಯಲ್ಲಿ ಅಡಗಿ ಕುಳಿತು ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ನಾಲ್ವರು ಉಗ್ರರನ್ನು ಹೊಡೆದುರುಳಿಸಿದೆ.

ಹತರಾದ ಉಗ್ರರಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಸ್ಪೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಪುಲ್ವಾಮ ಜಿಲ್ಲೆಯ ಲಸ್ಸಿಪೊರಾದ ಪಂಜ್ರನ್ ಪ್ರದೇಶದಲ್ಲಿನ ಮನೆಯೊಂದರಲ್ಲಿ ಉಗ್ರರು ಅಡಗಿ ಕುಳಿತಿದ್ದಾರೆ ಎಂಬ ಮಾಹಿತಿ ದೊರೆತ ಕೂಡಲೇ ಸ್ಥಳಕ್ಕೆ ದಾವಿಸಿದ ಸೇನಾಪಡೆಗಳು ಮನೆಯನ್ನು ಸುತ್ತುವರೆದರು.

ಈ ವೇಳೆ ಯೋಧರ ಆಗಮನದ ವಿಚಾರ ತಿಳಿಯುತ್ತಲೇ ಉಗ್ರರು ಗುಂಡಿನ ದಾಳಿ ನಡೆಸಲು ಆರಂಭಿಸಿದ್ದು, ಈ ವೇಳೆ ಸೈನಿಕರೂ ಕೂಡ ಪ್ರತಿದಾಳಿ ನಡೆಸಿದರು. ಸೇನೆ ದಾಳಿಗೆ ಒಟ್ಟು ನಾಲ್ವರು ಉಗ್ರರು ಸಾವನ್ನಪ್ಪಿದ್ದಾರೆ ಎಂದು ಹಿರಿಯ ಸೇನಾಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಿಆರ್‍ಪಿಎಫ್ ಹಾಗೂ ವಿಶೇಷ ಕಾರ್ಯಾಚರಣೆ ಪಡೆಯ 44 ರಾಷ್ಟ್ರೀಯ ರೈಫಲ್ಸ್ ದಳ ಸೈನಿಕರು ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿದ್ದರು.

ಸ್ಥಳದಲ್ಲಿ ಮತ್ತಷ್ಟು ಉಗ್ರರು ಅವಿತಿರುವ ಶಂಕೆ ವ್ಯಕ್ತವಾಗುತ್ತಿದ್ದು, ಪ್ರಸ್ತುತ ಸೇನೆ ಸುತ್ತಮುತ್ತಲ ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿದೆ. ಉಗ್ರರು ದಾಳಿ ನಡೆಸಲು ತಂದಿದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಸೇನೆ ವಶಕ್ಕೆ ಪಡೆದಿದೆ.

Share Post

Leave a Reply

error: Content is protected !!