ಆಪರೇಷನ್ ಕಮಲಕ್ಕೆ ಬಿಜೆಪಿ ವರಿಷ್ಠರಿಂದ ಗ್ರೀನ್ ಸಿಗ್ನಲ್..!

ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್-ಜೆಡಿಎಸ್ ನೇತೃತ್ವದ ದೋಸ್ತಿ ಸರ್ಕಾರವನ್ನು ಅಸ್ಥಿರಗೊಳಿಸುವ ಆಪರೇಷನ್ ಕಮಲಕ್ಕೆ ಕೇಂದ್ರ ಬಿಜೆಪಿ ನಾಯಕರಿಂದ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಯಾವುದೇ ವೇಳೆ ರಾಜ್ಯ ರಾಜಕೀಯದಲ್ಲಿ ಮಹತ್ವದ ವಿದ್ಯಮಾನಗಳು ಜರುಗುವ ಸಂಭವವಿದೆ.

ಈವರೆಗೂ ದೋಸ್ತಿ ಸರ್ಕಾರ ತಾನಾಗಿಯೇ ಬಿದ್ದುಹೋಗಲಿ ಎಂದು ಕಾಯುತ್ತಿದ್ದ ಬಿಜೆಪಿ ನಾಯಕರು ಭವಿಷ್ಯದ ದೃಷ್ಟಿಯಿಂದ ಎರಡೂ ಪಕ್ಷಗಳಲ್ಲಿ ಅಸಮಾಧಾನಗೊಂಡಿರುವ ಶಾಸಕರು ಬಂದರೆ ಬರಲಿ ನಮ್ಮದೇನು ಅಭ್ಯಂತರವಿಲ್ಲ ಎಂಬ ಭರವಸೆ ಕೊಟ್ಟಿದ್ದಾರೆ.

ಹೀಗಾಗಿಯೇ ತೆರೆಮರೆಯಲ್ಲಿ ಮತ್ತೆ ಆಪರೇಷನ್ ಕಮಲ ಆರಂಭವಾಗಿದ್ದು, ಈ ಬಾರಿ ಸಚಿವ ಸ್ಥಾನ ಮತ್ತು ಸೂಕ್ತ ಸ್ಥಾನಮಾನ ಸಿಗದೆ ಅಸಮಾಧಾನಗೊಂಡಿರುವ 20 ರಿಂದ 25 ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎನ್ನಲಾಗುತ್ತಿದೆ.

ಇದಕ್ಕೆ ಮುನ್ನುಡಿ ಎಂಬಂತೆ ನಾಲ್ಕು ದಿನಗಳ ಹಿಂದೆ ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್ ಮನೆಯಲ್ಲಿ ಕೆಲ ಕಾಂಗ್ರೆಸ್ ಶಾಸಕರು ಸಭೆ ಸೇರಿ ಮುಂದಿನ ಬೆಳವಣಿಗೆಗಳ ಕುರಿತು ಮಾತುಕತೆ ನಡೆಸಿದ್ದರು. ಇದರ ನಡುವೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಎಚ್.ವಿಶ್ವನಾಥ್ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಭೇಟಿಯಾಗಿ ಚರ್ಚೆ ನಡೆಸಿದ್ದರು.

ಇದಕ್ಕೂ ಮುನ್ನ ವಿಶ್ವನಾಥ್ ಮಾಜಿ ಸಚಿವ, ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಜತೆಯೂ ಮೈಸೂರು ಮತ್ತು ಬೆಂಗಳೂರಿನಲ್ಲಿ ಮಾತುಕತೆ ನಡೆಸಿದ್ದು, ನಾನಾ ಸಂಶಯಗಳಿಗೆ ಎಡೆಮಾಡಿಕೊಟ್ಟಿತ್ತು.

ಯಾರ್ಯಾರಿಗೆ ಗಾಳ..?

ಈ ಬಾರಿಯ ಆಪರೇಷನ್ ಕಮಲದಲ್ಲಿ ಸುಮಾರು ಎರಡು ಡಜನ್‍ಗೂ ಅಧಿಕ ಶಾಸಕರು ಬಿಜೆಪಿ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ ಎನ್ನಲಾಗುತ್ತಿದೆ.
ಬಿ.ಸಿ.ಪಾಟೀಲ್, ಡಾ.ಸುಧಾಕರ್, ವಿ.ಮುನಿಯಪ್ಪ, ಸುಬ್ಬಾರೆಡ್ಡಿ, ಬೆಂಗಳೂರಿನ ಇಬ್ಬರು ಪ್ರಭಾವಿ ಶಾಸಕರು, ಜೆಡಿಎಸ್‍ನ ನಾಲ್ವರು ಸೇರಿದಂತೆ ರಮೇಶ್ ಜಾರಕಿಹೊಳಿ, ನಾಗೇಂದ್ರ, ಪ್ರತಾಪ್‍ಗೌಡ ಪಾಟೀಲ್, ಗಣೇಶ್, ಮಹೇಶ್ ಕುಮಟಳ್ಳಿ, ಶಿವರಾಮ್ ಹೆಬ್ಬಾರ್ ಸೇರಿದಂತೆ ಅನೇಕರು ಆಪರೇಷನ್ ಕಮಲದ ಸಂಪರ್ಕದಲ್ಲಿದ್ದಾರೆ.

Share Post

Leave a Reply

Your email address will not be published. Required fields are marked *

error: Content is protected !!