ರಾಜ್ಯಾದ್ಯಂತ ಪೋಷಣ್ ಅಭಿಯಾನ್ ಯೋಜನೆ ವಿಸ್ತರಣೆ: ಬಿ.ಎಸ್.ಯಡಿಯೂರಪ್ಪ

ಮಕ್ಕಳಲ್ಲಿನ ರಕ್ತಹೀನತೆ ಹಾಗೂ ಅಪೌಷ್ಟಿಕತೆಯನ್ನು ತಡೆಗಟ್ಟುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಪೋಷಣ್ ಅಭಿಯಾನ್ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಣೆ ಮಾಡಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರು- ಮಕ್ಕಳಲ್ಲಿನ ರಕ್ತಹೀನತೆ ಹಾಗೂ ಅಪೌಷ್ಟಿಕತೆಯನ್ನು ತಡೆಗಟ್ಟುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಪೋಷಣ್ ಅಭಿಯಾನ್ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಣೆ ಮಾಡಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಕಲ್ಯಾಣ ಸಚಿವೆ ಸ್ಮೃತಿ ಇರಾನಿ, ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ನೇತೃತ್ವದ ನಿಯೋಗ ಸಿಎಂ ಯಡಿಯೂರಪ್ಪನವರನ್ನು ಭೇಟಿ ಮಾಡಿ ಯೋಜನೆಯನ್ನು ಅನುಷ್ಠಾನ ಮಾಡುವ ಸಂಬಂಧ ಚರ್ಚೆ ನಡೆಸಿದರು.

ಪೋಷಣ್ ಅಭಿಯಾನ್ ಯೋಜನೆಯನ್ನು ಈಗಾಗಲೇ ರಾಜ್ಯದ 19 ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ. ಮುಂದಿನ ದಿನಗಳಲ್ಲಿ ಉಳಿದಿರುವ 11 ಜಿಲ್ಲೆಗಳು ಸೇರಿದಂತೆ ರಾಜ್ಯಾದ್ಯಂತ ವಿಸ್ತರಣೆ ಮಾಡುತ್ತೇವೆ ಎಂದು ಬಿಎಸ್‍ವೈ ಆಶ್ವಾಸನೆ ನೀಡಿದ್ದಾರೆ. ಈ ಸಂಬಂಧ ಅಧಿಕಾರಿಗಳ ಜೊತೆ ಇನ್ನೊಂದು ಸುತ್ತಿನ ಸಭೆ ನಡೆಸಿ ಪೋಷಣ್ ಅಭಿಯಾನ್ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ಸೂಚನೆ ಕೊಡಲಾಗುವುದು.

ಈ ಯೋಜನೆಗೆ ಕರ್ನಾಟಕದಿಂದ ಉತ್ತಮ ಪ್ರತಿಕ್ರಿಯೆ ಬರುವಂತೆ ನೋಡಿಕೊಳ್ಳುತ್ತೇನೆ ಎಂದು ವಾಗ್ದಾನ ಮಾಡಿದರು. ಕೇಂದ್ರ ಸರ್ಕಾರದ ಈ ಯೋಜನೆಯನ್ನು ಪ್ರಧಾನಿ ನರೇಂದ್ರಮೋದಿ ಅವರು ಎಲ್ಲ ರಾಜ್ಯಗಳು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ಸೂಚನೆ ಕೊಟ್ಟಿದ್ದಾರೆ.

ಸಾಮಾಜಿಕ ಸಂಘಸಂಸ್ಥೆಗಳು, ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಗಣ್ಯರ ಮೂಲಕ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಶ್ರಮವಹಿಸಿದ್ದೇವೆ. ಹೀಗಾಗಿ ಕರ್ನಾಟಕ ಸರ್ಕಾರವು ಈ ಯೋಜನೆಯನ್ನು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸಲು ಆನಂದೋಲನ ರೂಪಿಸಬೇಕೆಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಮನವಿ ಮಾಡಿದರು.

ಇದೊಂದು ಅತ್ಯುತ್ತಮ ಯೋಜನೆಯಾಗಿದೆ. ಅಭಿಯಾನದ ಮೂಲಕ ಮಕ್ಕಳಲ್ಲಿ ಉಂಟಾಗುವ ರಕ್ತಹೀನತೆಯನ್ನು ತಡೆಗಟ್ಟವುದು, ಅಪೌಷ್ಟಿಕತೆಯನ್ನು ಹೋಗಲಾಡಿಸಲು ರಾಜ್ಯ ಸರ್ಕಾರ ಕೇಂದ್ರದೊಂದಿಗೆ ಕೈ ಜೋಡಿಸಬೇಕು. ಈಗಾಗಲೇ ದೇಶದ ಅನೇಕ ಭಾಗಗಳಲ್ಲಿ ಈ ಯೋಜನೆಯನ್ನು ಅನುಷ್ಠಾನ ಮಾಡಿದ್ದೇವೆ ಎಂದು ತಿಳಿಸಿದರು.
ಕೇಂದ್ರ ಸರ್ಕಾರದ ಈ ಯೋಜನೆಗೆ ಕರ್ನಾಟಕದಿಂದ ಎಲ್ಲ ರೀತಿಯ ಪ್ರೋತ್ಸಾಹ, ಸಹಕಾರ, ನೆರವು ಸಿಗಲಿದೆ ಎಂಬ ಆಶ್ವಾಸನೆಯನ್ನು ಮುಖ್ಯಮಂತ್ರಿ ನೀಡಿದರು.

Share Post

Leave a Reply

error: Content is protected !!