SSLC ಪರೀಕ್ಷೆ: ಒಂದು ಕೊಠಡಿಯಲ್ಲಿ 18-20 ವಿದ್ಯಾರ್ಥಿಗಳಿಗಷ್ಟೇ ಪರೀಕ್ಷೆ ಬರೆಯಲು ಅವಕಾಶ!

ಬೆಂಗಳೂರು: ಕೊರೋನಾ ವೈರಸ್ ಭೀತಿಯಿಂದಾಗಿ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್’ಸಿ ಪರೀಕ್ಷೆ ವೇಳೆ ಒಂದು ಕೊಠಿಡಯಲ್ಲಿ 18-20 ವಿದ್ಯಾರ್ಥಿಗಳಿಗಷ್ಟೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ.

ಎಸ್‌ಎಸ್‌ಎಲ್’ಸಿ ಪರೀಕ್ಷೆ ಕುರಿತು ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಶುಕ್ರವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಾತುಕತೆ ನಡೆಸಿದ್ದು, ಕೊರೋನಾ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೆಲ ನಿರ್ಣಯಗಳನ್ನು ಕೈಗೊಂಡಿದ್ದಾರೆ.

ಪರೀಕ್ಷಾ ಸಂದರ್ಭದಲ್ಲಿ ಒಂದು ಕೊಠಡಿಯಲ್ಲಿ 18-20 ವಿದ್ಯಾರ್ಥಿಗಳಿಗಷ್ಟೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು. ಹೆಚ್ಚುವರಿಯಾಗಿ ಇನ್ನೂ 8,000 ಕೊಠಡಿಗಳ ಅಗತ್ಯವಿದ್ದು, ಈ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ. ವಿದ್ಯಾರ್ಥಿಗಳಿಗೆ ಹೊಸದಾಗಿ ಅಧಿಕಾರಿಗಳು ಹಾಲ್ ಟಿಕೆಟ್ ವಿತರಿಸಲಿದ್ದಾರೆಂದು ತಿಳಿಸಿದ್ದಾರೆ.

ಪರೀಕ್ಷಾ ಕೊಠಡಿಗಳನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಿದ್ದು, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಸ್ಯಾನಿಟೈಸರ್ ಹಾಗೂ ಮಾಸ್ಕ್ ಗಳನ್ನು ಕಡ್ಡಾಯವಾಗಿ ಧರಿಸಬೇಕು.

ಕಲ್ಯಾಣ ಕರ್ನಾಟಕ ವಿಭಾಗದಲ್ಲಿ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಂತೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಇದೇ ವೇಳೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬೋಧಕ ವಿಭಾಗದಲ್ಲಿ ಖಾಲಿಯಿರುವ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಕೊರೋನಾ ವಿಚಾರ ಸಂಬಂಧ ಮಕ್ಕಳನ್ನು ಸಂವೇದನಾಶೀಲಗೊಳಿಸುವ ನಿಟ್ಟಿನಲ್ಲಿ ಎಲ್ಲಾ ವಯಸ್ಕ ಮಕ್ಕಳ ಪಠ್ಯಕ್ರಮ ಹಾಗೂ ಪಠ್ಯಪುಸ್ತಕಗಳನ್ನು ಪರಿಷ್ಕರಿಸುವ ಕೆಲಸವನ್ನೂ ಮಾಡಲಾಗುತ್ತದೆ. ಈಗಾಗಲೇ ಡಿಜಿಟಲ್ ಲೈಬ್ರರಿ ಆರಂಭಿಸಲು ಮೊಬೈಲ್ ಅಪ್ಲಿಕೇಶನ್ ಮತ್ತು ಶಾಲಾ ಮಕ್ಕಳಿಗಾಗಿ ಯೂಟ್ಯೂಬ್ ಚಾನೆಲ್ ಸೇರಿದಂತೆ ಮಾಹಿತಿ ಪ್ರಸಾರದ ಆನ್’ಲೈನ್ ವಿಧಾನಗಳನ್ನು ಅಳವಡಿಸಿಕೊಳ್ಳಲಾಗುತ್ತಿದೆ. ಶಾಲೆ ಬಿಟ್ಟ ಹಾಗೂ ವಲಸೆ ಕಾರ್ಮಿಕರ ಮಕ್ಕಳಿಗೆ ವಿಶೇಷ ತರಗತಿಗಳನ್ನೂ ನಡೆಸಲಾಗುತ್ತಿದೆ. ಶಾಲೆಯನ್ನು ಮರಳಿ ಆರಂಭಿಸುವ ಕುರಿತು ಶೀಘ್ರದಲ್ಲಿಯೇ ಸಭೆಯನ್ನು ನಡೆಸಲಾಗುತ್ತಿದೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಶಾಲೆಗಳನ್ನು ತೆರೆಯದಂತೆ ಹಲವು ಪೋಷಕರು ಮನವಿ ಮಾಡಿಕೊಳ್ಳುತ್ತಿದ್ದಾರೆಂದು ತಿಳಿಸಿದ್ದಾರೆ.

 

Share Post

Leave a Reply

Your email address will not be published. Required fields are marked *

error: Content is protected !!