ಧಾರವಾಡ, ನ. 23: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಸಿಬಿಐ ಪೊಲೀಸರಿಂದ ಬಂಧನಕ್ಕೊಳಗಾಗಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸದ್ಯಕ್ಕೆ ಬಿಡುಗಡೆಯಾಗುವಂತೆ ಕಾಣುತ್ತಿಲ್ಲ. ಡಿಸೆಂಬರ್ 7ರವರೆಗೆ ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನ ವಿಸ್ತರಿಸಿ ಧಾರವಾಡ 3ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಸೋಮವಾರ ಆದೇಶ ಹೊರಡಿಸಿದೆ.
ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ.9ರಂದು ಜಿಲ್ಲಾ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು. ಸೋಮವಾರ ನ್ಯಾಯಾಂಗ ಬಂಧನದ ಮೊದಲ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಧಾರವಾಡ 3ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿತು. ವಿಚಾರಣೆ ನಂತರ ವಿನಯ್ ಕುಲಕರ್ಣಿಗೆ ಮತ್ತೆ 14 ದಿನಗಳವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶಿಸಿದೆ. ಡಿ.7ರವರೆಗೆ ನ್ಯಾಯಾಂಗ ಬಂಧನದಲ್ಲಿರಲು ಸೂಚಿಸಿದೆ.
2016ರಲ್ಲಿ ಯೋಗೇಶ್ ಗೌಡ ಬರ್ಬರವಾಗಿ ಕೊಲೆಯಾಗಿದ್ದರು. ಈ ಸಂಬಂಧ ಸಿಬಿಐ ವಿಚಾರಣೆ ಕೈಗೆತ್ತಿಕೊಂಡಿದ್ದು, ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಹಾಗೂ ತನ್ನ ಪ್ರಭಾವದಿಂದ ಪ್ರಕರಣ ಮುಚ್ಚಿ ಹಾಕಿರುವ ಆರೋಪದಲ್ಲಿ ನ.5ರಂದು ವಿನಯ್ ಕುಲಕರ್ಣಿ ಅವರನ್ನು ಬಂಧಿಸಲಾಗಿತ್ತು.