ಬೆಂಗಳೂರು : ಅನುದಾನಿತ ಶಾಲಾ ಶಿಕ್ಷಕರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಿಹಿಸುದ್ದಿ ನೀಡಿದ್ದು, ಸರ್ಕಾರಿ ಶಾಲೆಗಳ ಶಿಕ್ಷಕರಿಗೆ ನೀಡುವ ಜ್ಯೋತಿ ಸಂಜೀವಿನಿ ಯೋಜನೆಯನ್ನು ಅನುದಾನಿತ ಶಾಲೆಗಳ ಶಿಕ್ಷಕರಿಗೂ ವಿಸ್ತರಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು ಜ್ಯೋತಿ ಸಂಜೀವಿನಿ ಯೋಜನೆಯನ್ನು ಅನುದಾನಿತ ಶಾಲೆಗಳ ಶಿಕ್ಷಕರಿಗೂ ವಿಸ್ತರಿಸಲಾಗುವುದು, ಈ ಕುರಿತಂತೆ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಿ ಚರ್ಚಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಸರ್ಕಾರಿ ನೌಕರರಿಗಿರುವ ಸೌಲಭ್ಯಗಳನ್ನು ನೀಡುವಲ್ಲಿ ಸರ್ಕಾರ ಮುಕ್ತ ಮನಸ್ಸು ಹೊಂದಿದ್ದು, ಈ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಸೂಕ್ತ ವೇದಿಕೆಯಲ್ಲಿ ಚರ್ಚಿಸಿ ನಿರ್ಧಾರಕ್ಕೆ ಬರಲಾಗುವುದು ಎಂದರು. ಈ ಕುರಿತಂತೆ ವರದಿಯನ್ನು ಕಡತದಲ್ಲಿ ಮಂಡಿಸುವಂತೆ ಸಚಿವರು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಬಾಕಿ ವೇತನದ ಹೊರೆಯಿಲ್ಲದೇ ಮತ್ತು ಸರ್ಕಾರದ ಬೊಕ್ಕಸಕ್ಕೆ ಅನವಶ್ಯಕ ಹೊರೆಯಾಗದಂತೆ ಎಲ್ಲ ಅನುದಾನಿತ ಶಾಲೆಗಳ ಶಿಕ್ಷಕರಿಗೆ ಸೌಲಭ್ಯವನ್ನು ಒದಗಿಸಲು ಸಿಎಂ ಯಡಿಯೂರಪ್ಪ ಅವರ ಜೊತೆ ಚರ್ಚಿಸಿ ನಿರ್ಧಾರಕ್ಕೆ ಬರಲಾಗುವುದು ಎಂದು ಸುರೇಶ್ ಕುಮಾರ್ ಹೇಳಿದರು.