ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ರಾಜ್ಯದ ಸರಕಾರಿ ಪದವಿ, ಎಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ಕಾಲೇಜುಗಳ ಒಟ್ಟು 1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿಗಳನ್ನು ನೀಡಲಾಗುವುದು ಎಂದು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವಿಷಯ ತಿಳಿಸಿದ್ದು, ಕೋವಿಡ್ ಹಿನ್ನೆಲೆಯಲ್ಲಿ ಡಿಜಿಟಲ್ ಕಲಿಕೆಯನ್ನ ಉತ್ತೇಜಿಸುವ ನಿಟ್ವಿನಲ್ಲಿ ವಿದ್ಯಾರ್ಥಿಗಳ ಕಲಿಕೆಗೆ ಅಗತ್ಯವಾದ ಸೌಲಭ್ಯಗಳನ್ನ ಕಲ್ಪಿಸುವ ಉದ್ದೇಶದಿಂದ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದರು.
ಪ್ರಸಕ್ತ 2020-21ರ ಶೈಕ್ಷಣಿಕ ವರ್ಷದಲ್ಲಿ 430 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಥಮ ವರ್ಷದ ವಿದ್ಯಾರ್ಥಿಗಳು, 14 ಸರಕಾರಿ ಎಂಜನಿಯರಿಂಗ್ ಕಾಲೇಜುಗಳಲ್ಲಿನ ಪ್ರಥಮ, ದ್ವಿತೀಯ, ತೃತೀಯ ವರ್ಷದ ವಿದ್ಯಾರ್ಥಿಗಳು ಹಾಗೂ 87 ಸರಕಾರಿ ಪಾಲಿಟೆಕ್ನಿಕ್ಗಳಲ್ಲಿ ಓದುತ್ತಿರುವ ಪ್ರಥಮ, ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಈ ಟ್ಯಾಬ್ಲೆಟ್ಗಳನ್ನು ನೀಡಲಾಗುತ್ತಿದೆ. ಇನ್ನು ಇದಕ್ಕಾಗಿ ಟ್ಯಾಬ್ಲೆಟ್ಗಳ ಖರೀದಿಗೆ ಒಟ್ಟು 155.4 ಕೋಟಿ ರೂ. ವೆಚ್ಚವಾಗುತ್ತಿದ್ದು, ಪ್ರತಿ ಒಂದು ಟ್ಯಾಬ್ಲೆಟ್ ಅನ್ನು 10,000 ರೂ. ಬೆಲೆಯಂತೆ ಖರೀದಿ ಮಾಡಲಾಗುತ್ತಿದೆ ಎನ್ನುವ ಮಾಹಿತಿ ನೀಡಿದರು.