Saturday, January 23, 2021
Home ದೆಹಲಿ ಕೃಷಿ ಕಾಯ್ದೆಗಳ ವಿರೋಧಿಸಿ ರೈತರ ಪ್ರತಿಭಟನೆ ವೇಳೆ 60 ಮಂದಿ ಸಾವು : ಕಿಸಾನ್ ಯೂನಿಯನ್

ಇದೀಗ ಬಂದ ಸುದ್ದಿ

ಕೃಷಿ ಕಾಯ್ದೆಗಳ ವಿರೋಧಿಸಿ ರೈತರ ಪ್ರತಿಭಟನೆ ವೇಳೆ 60 ಮಂದಿ ಸಾವು : ಕಿಸಾನ್ ಯೂನಿಯನ್

ನವದೆಹಲಿ, ಜ. 04: ಕೇಂದ್ರದ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಕಳೆದ ಒಂದು ತಿಂಗಳಿಂದ ರೈತರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಒಟ್ಟು 60 ಮಂದಿ ಇದುವರೆಗೆ ಮೃತಪಟ್ಟಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಭಾರತೀಯ ಕಿಸಾನ್ ಯೂನಿಯನ್ ನ ವಕ್ತಾರ ರಾಕೇಶ್ ಟಿಕೈಟ್ ಅವರು, ರೈತರ ಪ್ರತಿಭಟನೆ ಆರಂಭವಾದದಿನದಿಂದ ಇಂದಿನವರೆಗೂ 60 ರೈತರು ಸಾವಿಗೀಡಾಗಿದ್ದಾರೆ. ಕೃಷಿ ಕಾನೂನು ವಿರೋಧಿಸಿ ನಡೆಯುತ್ತಿರುವ ಹೋರಾಟದಲ್ಲಿ ಪ್ರತೀ 16 ಗಂಟೆಗೆ ಓರ್ವ ರೈತ ಸಾವನ್ನಪ್ಪುತ್ತಿದ್ದಾನೆ. ರೈತನ ಸಾವಿಗೆ ಕೇಂದ್ರ ಸರ್ಕಾರವೇ ನೇರಹೊಣೆಯಾಗುತ್ತದೆ. ಇದಕ್ಕೆ ಸರ್ಕಾರವೇ ಉತ್ತರ ನೀಡಬೇಕು ಎಂದು ಹೇಳಿದರು.

ರೈತರ ಪ್ರತಿಭಟನೆ ಹಿನ್ನಲೆಯಿಂದಾಗಿ ಉತ್ತರ ಭಾರತದ ರಾಜ್ಯಗಳು ಅಕ್ಷರಶಃ ನಲುಗಿ ಹೋಗಿದ್ದು, ರಾಷ್ಟ್ರೀಯ ಹೆದ್ದಾರಿಗಳಲ್ಲಿ ರೈತರ ಪ್ರತಿಭಟನೆಯಿಂದಾಗಿ ಸಂಚಾರ ಅಸ್ತವ್ಯಸ್ಥವಾಗಿದೆ. ಇನ್ನು ರಾಜಧಾನಿ ದೆಹಲಿಯ ಸಿಂಘು, ಟಿಕ್ರಿ, ಧಂನ್ಸಾ ಗಡಿಭಾಗಗಳನ್ನು ಬಂದ್ ಮಾಡಲಾಗಿದೆ.

ಪ್ರಯಾಣಿಕರು ದೆಹಲಿ ತಲುಪಲು ಆನಂದ್ ವಿಹಾರ್, ಡಿಎನ್‌ಡಿ, ಭೋಪ್ರಾ ಮತ್ತು ಲೋನಿ ಗಡಿಭಾಗದ ಮಾರ್ಗಗಳನ್ನು ಬಳಸುವಂತೆ ಪೊಲೀಸರು ಸಲಹೆ ನೀಡಿದ್ದಾರೆ. ಇತ್ತ ರೈತರ ಪರ ಒಕ್ಕೂಟಗಳ ಬೇಡಿಕೆಗಳನ್ನು ಈಡೇರಿಸದಿದ್ದರೆ ಟ್ರ್ಯಾಕ್ಟರ್ ಮೆರವಣಿಗೆ ನಡೆಸುವುದಾಗಿ ಪಂಜಾಬ್ ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯ ಜಂಟಿ ಕಾರ್ಯದರ್ಶಿ ಸುಖ್ವಿಂದರ್ ಎಸ್ ಸಾಬ್ರಾ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಮಳೆ ಮತ್ತು ತೀವ್ರ ಚಳಿಗಾಳಿಯ ಹೊರತಾಗಿಯೂ ಪ್ರತಿಭಟನಾ ನಿರತರ ರೈತರು ಪ್ರತಿಭಟನೆ ಮುಂದುವರೆಸಿದ್ದು, ಗಡಿಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ರೈತರು ತಮ್ಮ ಪ್ರತಿಭಟನೆ ಮುಂದುವರೆಸಿದ್ದಾರೆ.

ಕಳೆದ 40 ದಿನಗಳಿಂದ ರೈತರು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತರ ಉತ್ಪಾದನಾ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ 2020, ರೈತರು (ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ 2020, ಮತ್ತು ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆ 2020 ಅನ್ನು ವಿರೋಧಿಸಿ ವ್ಯಾಪಕ ಪ್ರತಿಭಟನೆ ನಡೆಸಿದ್ದಾರೆ.

ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ದೇಶದ ವಿವಿಧ ಭಾಗಗಳ ರೈತರು ದೆಹಲಿಯ ಗಡಿಭಾಗಗಳಲ್ಲಿ ನಡೆಸುತ್ತಿರುವ ಪ್ರತಿಭಟನೆ 40ನೇ ದಿನಕ್ಕೆ ಕಾಲಿಟ್ಟಿದೆ. ತೀವ್ರ ಚಳಿಯಲ್ಲೇ ಪ್ರತಿಭಟನೆ ನಡೆಸುತ್ತಿದ್ದ ರೈತರಿಗೆ, ಭಾನುವಾರ ಮಳೆ ಕೂಡ ಅಡ್ಡಿ ಮಾಡಿದೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ರೈತಪರ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ 40ನೇ ದಿನಕ್ಕೆ ಕಾಲಿಟ್ಟಿದ್ದು, ಈ ಮ್ಯಾರಥಾನ್ ಪ್ರತಿಭಟನೆ ವೇಳೆ ಈ ವರೆಗೂ 60 ರೈತರು ಸಾವಿಗೀಡಾಗಿದ್ದಾರೆ ಎಂದು ಭಾರತೀಯ ಕಿಸಾನ್ ಯೂನಿಯನ್ ಹೇಳಿದೆ.

TRENDING