ಮುಂಬೈ: ಕೋವಿಡ್-19ಗೆ ಸಂಬಂಧಿಸಿದ ಸಾಂಸ್ಥಿಕ ಕ್ವಾರಂಟೈನ್ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ, ಬಾಲಿವುಡ್ ನಟರಾದ ಅರ್ಬಾಜ್ ಖಾನ್, ಸೊಹೇಲ್ ಖಾನ್ ಹಾಗೂ ಸೊಹೇಲ್ ಪುತ್ರ ನಿರ್ವಾಣ್ ಖಾನ್ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
‘ಕಳೆದ ತಿಂಗಳು ಯುಎಇಯಿಂದ ಮುಂಬೈಗೆ ಹಿಂದಿರುಗಿದ ನಂತರ, ಬಾಂದ್ರಾದಲ್ಲಿನ ಹೋಟೆಲ್ವೊಂದರಲ್ಲಿ ಸಾಂಸ್ಥಿಕ ಕ್ವಾರಂಟೈನ್ಗೆ ಒಳಗಾಗುವಂತೆ ಖಾನ್ ಸಹೋದರರಿಗೆ ಹಾಗೂ ನಿರ್ವಾಣ್ ಸಿಂಗ್ಗೆ ಸೂಚಿಸಲಾಗಿತ್ತು. ಆದರೆ, ಅವರು ಮನೆಗೆ ತೆರಳುವ ಮೂಲಕ ನಿಯಮಗಳನ್ನು ಉಲ್ಲಂಘಿಸಿದ್ದಾರೆ’ ಎಂದು ಬೃಹನ್ ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು ಹೇಳಿದ್ದಾರೆ.
‘ಈ ಹಿನ್ನೆಲೆಯಲ್ಲಿ ಈ ಮೂವರ ವಿರುದ್ಧ ಪೊಲೀಸರು ಸೋಮವಾರ ಎಫ್ಐಆರ್ ದಾಖಲಿಸಿದ್ದಾರೆ’ ಎಂದೂ ಅಧಿಕಾರಿಗಳು ಹೇಳಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿದ ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ತೋಪೆ, ‘ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಕೋವಿಡ್-19 ಪಿಡುಗಿನ ಹಿನ್ನೆಲೆಯಲ್ಲಿ ವಿಧಿಸಲಾಗಿದ್ದ ನಿಯಮ, ಶಿಷ್ಟಾಚಾರವನ್ನು ಪ್ರತಿಯೊಬ್ಬರೂ ಪಾಲಿಸುವುದು ಅಗತ್ಯ’ ಎಂದು ಪ್ರತಿಕ್ರಿಯಿಸಿದರು.
‘ಸಾಂಸ್ಥಿಕ ಕ್ವಾರಂಟೈನ್ ನಿಯಮಗಳನ್ನು ಉಲ್ಲಂಘಿಸಿರುವ ಕಾರಣಕ್ಕೆ ಈ ಸೆಲೆಬ್ರಿಟಿಗಳ ವಿರುದ್ಧ ಆರೋಗ್ಯ ಇಲಾಖೆ ಕ್ರಮ ತೆಗೆದುಕೊಳ್ಳುವುದೇ ಅಥವಾ ಕ್ರಮಕ್ಕೆ ಶಿಫಾರಸು ಮಾಡುವುದೇ’ ಎಂಬ ಸುದ್ದಿಗಾರರ ಪ್ರಶ್ನೆಗೆ, ‘ಮೂವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ’ ಎಂದು ಸಚಿವ ತೋಪೆ ಉತ್ತರಿಸಿದರು.