ರಾಯಚೂರು, ಎ.7: ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ಹೇಳಿಕೆಗಳಿಗೆ ಸಂಬಂಧಿಸಿದಂತೆ ಈಗಾಗಲೇ ಪಕ್ಷದಿಂದ ನೋಟಿಸ್ ಕೊಡಲಾಗಿದ್ದು, ಅವರ ಕುರಿತು ಹೇಳಿಕೆಗಳನ್ನು ನೀಡುತ್ತಾ ಹೋದರೆ ನಾನೇ ಹುಚ್ಚ ಆಗಬೇಕಾಗುತ್ತದೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.
ಬುಧವಾರ ಮಸ್ಕಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರನ ವಿರುದ್ಧ ಕುಟುಂಬ ರಾಜಕಾರಣ ಮಾಡುತ್ತಿದ್ದಾರೆ ಎಂಬ ಆರೋಪವನ್ನು ಪದೇ ಪದೇ ಮಾಡುತ್ತಿದ್ದಾರೆ. ಹೀಗಾಗಿ, ಬಿಜೆಪಿ ಪಕ್ಷ ಯತ್ನಾಳ್ಗೆ ನೋಟಿಸ್ ನೀಡಿದ್ದು, ಅವರೇ ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿದರು.
ರಾಜ್ಯದಲ್ಲಿ ನಡೆಯುತ್ತಿರುವ ಲೋಕಸಭೆ ಹಾಗೂ ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳೇ ಗೆಲುವು ಸಾಧಿಸುತ್ತಾರೆ. ಮತದಾರರೂ ನಮಗೆ ಮತ್ತೆ ಮತ ನೀಡುವ ಮೂಲಕ ಆರ್ಶೀವಾದ ಮಾಡುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಯತ್ನಾಳ್ ಮತ್ತು ಕೆ.ಎಸ್.ಈಶ್ವರಪ್ಪ ಅವರಿಗೆ ಆರೆಸ್ಸೆಸ್ ಬೆಂಬಲ ಇದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ, ಆರೆಸ್ಸೆಸ್ನವರು ಯಾವಾಗಲೂ ಕತ್ತರಿ ಹಾಕುವ ಕೆಲಸ ಮಾಡುವುದಿಲ್ಲ. ಸೂಜಿ, ದಾರದಂತೆ ಜೋಡಿಸುವ ಕೆಲಸ ಮಾಡುತ್ತಾರೆ ಎಂದು ಹೇಳಿದರು.